Wednesday, May 14, 2008

ಎದೆಯು ಮರಳಿ ತೊಳಲುತಿದೆ

ಎದೆಯು ಮರಳಿ ತೊಳಲುತಿದೆ,
ದೊರೆಯುದದನೆ ಹುಡುಕುತಿದೆ;
ಅತ್ತ ಇತ್ತ ದಿಕ್ಕುಗೆಟ್ಟು
ಬಳ್ಳಿಬಾಳು ಚಾಚುತಿದೆ
ತನ್ನ ಕುಡಿಯನು.

ಸಿಗಲಾರದ ಆಸರಕೆ
ಕಾದ ಕಾವ ಬೇಸರಕೆ
ಮಿಡುಕಿ ದುಡುಕಲೆಳಸುತಿದೆ
ತನ್ನ ಗಡಿಯನು.

ಅದಕು ಇದಕು ಅಂಗಲಾಚಿ
ತನ್ನೊಲವಿಗೆ ತಾನೆ ನಾಚಿ
ದಡವ ಮುಟ್ಟಿ ಮುಟ್ಟದೊಲು
ಹಿಂದೆಗೆಯುವ ವೀಚಿ ವೀಚಿ
ಮುರುಟದಲಿದೆ ಮನದಲಿ !

ನೀರದಗಳ ದೂರತೀರ
ಕರೆಯುತಲಿದೆ ಎದೆಯ ನೀರ,
ಮೀರುತಲಿದೆ ಹೃದಯಭಾರ
ತಾಳಲೆಂತು ನಾ ?

ಯಾವ ಬಲವು ಯಾವ ಒಲವು
ಕಾಯಬೇಕೋ ಅದರ ಹೊಳವು
ಕಾಣದೆ ದಳ್ಳಿಸಲು ಮನವು
ಬಾಳಲೆಂತು ನಾ ?

----- ಎಮ್. ಗೋಪಾಲಕೃಷ್ಣ ಅಡಿಗ.

1 comment:

Gururaja Narayana said...

ನಮಸ್ಕಾರ ರೇಣುಕ, ನಿಮಗೊಂದು ಆಹ್ವಾನ ಪತ್ರಿಕೆ..

ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
ವಿಷಯ:
ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.

ಕಾರ್ಯಕ್ರಮಕ್ಕೆ ಸೀಮಿತ ಆಸನಗಳು ಲಭ್ಯವಿರುವ ಕಾರಣ ಭಾಗವಹಿಸಲು ಆಸಕ್ತಿ ಇರುವವರು ದಯಮಾಡಿ ಮುಂಚಿತವಾಗಿ ಕೆಳಗೆ ಕೊಟ್ಟಿರುವ ಲಿಂಕ್‍ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.

http://saadhaara.com/events/index/english
http://saadhaara.com/events/index/kannada

ಸಮಾರಂಭದಲ್ಲಿ ಭಾಗವಹಿಸಲು ನೋಂದಾವಣೆ ಕಡ್ಡಾಯ.

ಉತ್ಸಾಹ ಮತ್ತು ಸಮಯ ಇದ್ದರೆ ವಿಚಾರಸಂಕಿರಣದ ನಂತರ ಅನೌಪಚಾರಿಕವಾಗಿ ಬ್ಲಾಗಿಗಳಿಗೆ ‘ಬ್ಲಾಗೀ ಮಾತುಕತೆ’ ನಡೆಸುವ ಉದ್ದೇಶವೂ ಇದೆ.

ನೀವೂ ಬನ್ನಿ ಮತ್ತು ಆಸಕ್ತಿಯಿರುವ ನಿಮ್ಮ ಗೆಳೆಯರನ್ನು ಕರೆತನ್ನಿ.

-ಕನ್ನಡಸಾಹಿತ್ಯ.ಕಾಂ ಬಳಗ

ದಯಮಾಡಿ ಬನ್ನಿ ಮತ್ತು ಹೀಗೆ ಸ್ಪಾಮ್ ಮಾಡಿ ಆಹ್ವಾನಿಸುತ್ತಿರುವುದಕ್ಕೆ ಕ್ಷಮೆಯಿರಲಿ.

ಗುರು